ಕೋಸ್ಟಲ್ ಟಾಕ್ ನ್ಯೂಸ್ | ಉಡುಪಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕಾರಾಗೃಹದ ಬಂಧಿಗಳಿಗೆ ಗೆರಟೆ ಕರಕುಶಲ ವಸ್ತುಗಳ ತಯಾರಿಕೆ ಮತ್ತು ಅಲಂಕಾರಿಕ ಮೌಲ್ಯವರ್ಧಿತ ಉತ್ಪನ್ನಗಳ ಕೌಶಲ್ಯ ತರಬೇತಿ ನೀಡಲಾಯಿತು.
ಅಕ್ಟೋಬರ್ 23ರಿಂದ 31ರವರೆಗೆ ನಡೆದ ಈ ತರಬೇತಿಯಲ್ಲಿ ಒಟ್ಟು 32 ಬಂಧಿಗಳು ಭಾಗವಹಿಸಿದ್ದರು. ಇದರ ಸಮಾರೋಪ ಸಮಾರಂಭ ನವೆಂಬರ್ 4ರಂದು ಜಿಲ್ಲಾ ಕಾರಾಗೃಹದಲ್ಲಿ ನಡೆಯಿತು.
ಬಂಧಿಗಳಿಗೆ ಹೊಸ ಕೌಶಲ್ಯಗಳನ್ನು ಕಲಿಸಿ, ಅವರಲ್ಲಿ ಸ್ವಾವಲಂಬನೆಯ ಮನೋಭಾವ ಬೆಳೆಸುವುದು ಈ ತರಬೇತಿಯ ಉದ್ದೇಶವಾಗಿದೆ. ತೆಂಗಿನ ಗೆರಟೆಯಿಂದ ಉಪಯುಕ್ತ ಹಾಗೂ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಮೂಲಕ ಬಂಧಿಗಳು ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಲು ಮತ್ತು ಬಿಡುಗಡೆಯ ಬಳಿಕ ಹೆಚ್ಚು ಸೃಜನಶೀಲವಾಗಿ ಯೋಚಿಸುವ ಸಾಮರ್ಥ್ಯ ಬೆಳೆಸಿಕೊಳ್ಳಲು ಈ ತರಬೇತಿ ಸಹಕಾರಿಯಾಗಲಿದೆ.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ಯಶ್ವಂತ್ ರಾವ್ ಮತ್ತು ಭಾರತೀಯ ವಿಕಾಸ ಟ್ರಸ್ಟ್ನ ಹಿರಿಯ ಸಹಾಯಕ ಜಗದೀಶ ಪೈ ಉಪಸ್ಥಿತರಿದ್ದರು. ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಅಧೀಕ್ಷಕ ವಿಜಯಕುಮಾರ್ ಡಿ. ಚವ್ಹಾಣ ಸೇರಿದಂತೆ ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.