ಕೋಸ್ಟಲ್ ಟಾಕ್ ನ್ಯೂಸ್ | ಕಾಪು

ಕಾಪು ತಾಲೂಕಿನ ಉಳಿಯಾರಗೋಳಿ ಯಾರ್ಡ್ ಬೀಚ್‌ನಲ್ಲಿ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ 5.710 ಕೆ.ಜಿ. ಗಾಂಜಾ, ರೂ. 225 ನಗದು ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಗಾಂಜಾದ ಮೌಲ್ಯ ರೂ 2.85 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ಕಾಪು ತಾಲೂಕಿನ ಬೆಳಪು ಗ್ರಾಮದ ವಿನಯನಗರದ ಆರೀಫ್ (38) ಹಾಗೂ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆಯ ಅಕೀಫ್ (34) ಎಂದು ಗುರುತಿಸಲಾಗಿದೆ.

ಅಕ್ಟೋಬರ್ 27ರಂದು ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ, ಕಾಪು ಪೊಲೀಸ್ ಠಾಣೆಯ ಪಿಎಸ್‌ಐ ತೇಜಸ್ವಿ ನೇತೃತ್ವದ ತಂಡ ಮಧ್ಯಾಹ್ನ 12.05ಕ್ಕೆ ಯಾರ್ಡ್ ಬೀಚ್‌ನಲ್ಲಿ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತಮ್ಮ ವಶದಲ್ಲಿ ಇಟ್ಟುಕೊಂಡಿರುವುದು ಪತ್ತೆಯಾಗಿದೆ.

ಆರೋಪಿಗಳು ಆಂಧ್ರಪ್ರದೇಶದ ಹೈದರಾಬಾದ್‌ನಿಂದ ಗಾಂಜಾ ತಂದು ಮಾರಾಟ ಮಾಡುತ್ತಿರುವುದಾಗಿ ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇವರ ವಿರುದ್ಧ ಈಗಾಗಲೇ ಹಲವು ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳಿವೆ ಎನ್ನಲಾಗಿದೆ.

ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.