ಕೈಗಾರಿಕ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸಿ : ಜಿಲ್ಲಾಧಿಕಾರಿ 

ಕೋಸ್ಟಲ್ ಟಾಕ್ ನ್ಯೂಸ್ | ಕಾರವಾರ 

ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕಾ ಪ್ರದೇಶಗಳಿಗೆ, ಸಂಬOಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು. 

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಮತ್ತು ಏಕ ಗವಾಕ್ಷಿ ಒಪ್ಪಿಗೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಭಟ್ಕಳ, ದಾಂಡೇಲಿ, ಹಳಿಯಾಳ, ಕುಮಟಾ, ಯಲ್ಲಾಪುರ, ಶಿರಸಿ, ಶಿರವಾಡ ಮತ್ತು ರಾಮನಗರದಲ್ಲಿರುವ ಕೈಗಾರಿಕಾ ವಸಾಹತು ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕುರಿತಂತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಉದ್ದಿಮೆದಾರರಿಂದ ಬೇಡಿಕೆ ಪಡೆದು, ಜಿಲ್ಲಾ ನಗರಾಭಿವೃದ್ದಿ ಕೋಶದ ಅಧಿಕಾರಿಗಳಿಗೆ ಸಲ್ಲಿಸಬೇಕು. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಬೇಡಿಕೆಗಳನ್ನು ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಯಲ್ಲಿ ಈ ಕಾಮಗಾರಿಗಳನ್ನು ನಮೂದಿಸಿ, ಕೂಡಲೇ ಪ್ರಸ್ತಾವನೆಯನ್ನು ಸಲ್ಲಿಸಿ, ಸದ್ರಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು. 

ಕೈಗಾರಿಕಾ ವಸಾಹತುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಘಟಕಗಳು ಮತ್ತು ಸ್ಥಗಿತಗೊಂಡಿರುವ ಘಟಕಗಳ ಮಾಹಿತಿಯನ್ನು, ಪ್ರತಿಯೊಂದು ಕೈಗಾರಿಕಾ ವಸಾಹತುಗಳಿಗೆ ಖುದ್ದು ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲಿಸಿ, ವಸ್ತುಸ್ಥಿತಿಯ ವರದಿಯನ್ನು ನೀಡುವಂತೆ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. 

ರಾಮನಗರ ಮತ್ತು ಕುಮಟಾ ಕೈಗಾರಿಕಾ ವಸಾಹತುಗೆ ನಿರಂತರ ವಿದ್ಯುತ್ ಪೂರೈಕೆ ಮಾಡಲು 33/1 ಕೆವಿ ಸಾಮರ್ಥ್ಯದ ವಿದ್ಯುತ್ ಉಪ ಕೇಂದ್ರ ಸ್ಥಾಪಿಸುವ ಕುರಿತು ಮತ್ತು ಅಂಬೇವಾಡಿ ಆಟೋ ನಗರ ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಹಂಚಿಕೆ ಕುರಿತು ಕೆ.ಐ.ಎ.ಡಿ.ಬಿ ಅವರ ನಿರ್ದೇಶನದಂತೆ ಕ್ರಮ ಕೈಗೊಳ್ಳಬೇಕು ಎಂದರು. ಕುಮಟಾ ಕೈಗಾರಿಕಾ ಪ್ರದೇಶಕ್ಕೆ ಪ್ರತ್ಯೇಕ ಫೀಡರ್ ಅಳವಡಿಸಲು ಅಂದಾಜುಪಟ್ಟಿ ಮಂಜೂರಾಗಿದ್ದು, ಭೂಗತ ಕೇಬಲ್‌ನ್ನು ರೈಲ್ವೆ ಟ್ರಾಕ್ ನ ಕೆಳಗೆ ಅಳವಡಿಸುವ ಕಾಮಗಾರಿ ಬಾಕಿ ಇದ್ದು, ಒಂದು ತಿಂಗಳ ಒಳಗೆ ಈ ಸಂಪೂರ್ಣ ಕಾಮಗಾರಿ ಮುಕ್ತಾಯವಾಗಲಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ನಾಯ್ಕ, ಜಿ.ಪಂ. ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.