ಗ್ಯಾರಂಟಿ ಯೋಜನೆಗಳ ಮರುಸರ್ವೇಯಲ್ಲಿ ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ಎಚ್ಚರ ವಹಿಸಿ: ಅಶೋಕ್ ಕುಮಾರ್ ಕೊಡವೂರು
ಕೋಸ್ಟಲ್ ಟಾಕ್ ನ್ಯೂಸ್ | ಉಡುಪಿ
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಮರುಸರ್ವೇ ಕಾರ್ಯವನ್ನು ಕೈಗೊಳ್ಳುವಾಗ ಯಾವುದೇ ಅರ್ಹ ಫಲಾನುಭವಿಗಳು ಯೋಜನೆಗಳಿಂದ ಹೊರಗುಳಿಯದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸೂಚಿಸಿದರು.
ಉಡುಪಿ ಜಿಲ್ಲಾ ಪಂಚಾಯತ್ನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳ ನೈಜ ಫಲಾನುಭವಿಗಳನ್ನು ಗುರುತಿಸುವಾಗ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಸೂಕ್ತ ಪರಿಶೀಲನೆ ನಡೆಸಬೇಕು. ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಯೋಜನೆಗಳಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಶೀಲನೆಗಾಗಿ ಈಗಾಗಲೇ 1,050 ಗಣತಿದಾರರನ್ನು ಗುರುತಿಸಲಾಗಿದ್ದು, ಮೊಬೈಲ್ ಆಪ್ ಮೂಲಕ ಸಮೀಕ್ಷೆ ನಡೆಸಲು ಅವರಿಗೆ ಅಗತ್ಯ ತರಬೇತಿ ನೀಡಬೇಕು. ಮನೆ-ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಫಲಾನುಭವಿಗಳ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ, ಅರ್ಹರು ಯಾರೂ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬ ಪಡಿತರ ಚೀಟಿದಾರರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಜಿಲ್ಲೆಯಲ್ಲಿ ಇ-ಕೆವೈಸಿ ಪ್ರಗತಿ ಕುಂಠಿತವಾಗಿದ್ದು, ಕೆಲವು ಪ್ರದೇಶಗಳಲ್ಲಿ ಸರ್ವರ್ ಸಮಸ್ಯೆಯಿಂದ ತೊಂದರೆಯಾಗುತ್ತಿದೆ ಎಂಬ ದೂರುಗಳಿವೆ. ಇಲಾಖೆಯ ಅಧಿಕಾರಿಗಳು ಈ ಸಮಸ್ಯೆಗಳನ್ನು ಪರಿಹರಿಸಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದರು.
ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 3.64 ಲಕ್ಷ ಮಂದಿ ನೋಂದಣಿಯಾಗಿದ್ದು, 3.17 ಲಕ್ಷ ಫಲಾನುಭವಿಗಳ ಸರ್ವೇ ಪೂರ್ಣಗೊಂಡಿದೆ. 47,000 ಮನೆಗಳ ಸರ್ವೇ ಬಾಕಿ ಇದ್ದು, ಅದನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಕ್ತಿ ಯೋಜನೆಯಡಿ ಗ್ರಾಮೀಣ ಭಾಗದ ಜನರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಬಸ್ ಸೇವೆ ಕಲ್ಪಿಸಬೇಕು. ಈ ಕುರಿತು ಗ್ರಾಮೀಣ ಪ್ರದೇಶಗಳಿಂದ ಬೇಡಿಕೆಗಳು ಬರುತ್ತಿದ್ದು, ಕೆಎಸ್ಆರ್ಟಿಸಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಯುವನಿಧಿ ಯೋಜನೆಯಡಿ 5,276 ಅಭ್ಯರ್ಥಿಗಳು ನೋಂದಣಿಯಾಗಿದ್ದು, 5,016 ಫಲಾನುಭವಿಗಳಿಗೆ Rs 13.67 ಕೋಟಿ ನೇರ ನಗದು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. ಪ್ರತಿ ವರ್ಷ ಹೊಸ ಫಲಾನುಭವಿಗಳು ಸೇರ್ಪಡೆಯಾಗುವ ಹಿನ್ನೆಲೆಯಲ್ಲಿ ಯೋಜನೆಯ ಕುರಿತು ಹೆಚ್ಚಿನ ಪ್ರಚಾರ ನೀಡಬೇಕು ಎಂದು ಅಶೋಕ್ ಕುಮಾರ್ ಕೊಡವೂರು ಹೇಳಿದರು.