ಕೋಸ್ಟಲ್ ಟಾಕ್ ನ್ಯೂಸ್ | ಬಂಟ್ವಾಳ
ಪತ್ನಿಯ ಸಾವು ಹೃದಯಾಘಾತದಿಂದ ಸಂಭವಿಸಿದೆ ಎಂದು ಬಿಂಬಿಸಲು ಯತ್ನಿಸಿದ್ದ ವ್ಯಕ್ತಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಶಿಕ್ಷೆಗೆ ಗುರಿಯಾದ ಸಂಜೀವ ನಾಯ್ಕ, 2024ರ ಡಿಸೆಂಬರ್ 11ರ ರಾತ್ರಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ತನ್ನ ಪತ್ನಿ ಹೃದಯಾಘಾತದಿಂದ ಕುಸಿದು ಬಿದ್ದಿರುವುದಾಗಿ ನೆರೆಹೊರೆಯವರಿಗೆ ತಿಳಿಸಿದ್ದ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಮೃತಪಟ್ಟಿದ್ದರು. ಮಹಿಳೆಯ ಮೃತದೇಹದಲ್ಲಿ ಗಾಯಗಳು ಕಂಡುಬಂದಿದ್ದರಿಂದ ಅನುಮಾನಗೊಂಡ ವಿಟ್ಲ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 103(1) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸ್ ನಿರೀಕ್ಷಕ ಎಚ್.ಇ. ನಾಗರಾಜ್ ಅವರು ಸಾಕ್ಷ್ಯಗಳನ್ನು ಸಂಗ್ರಹಿಸಿ ಸಂಜೀವ ನಾಯ್ಕ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ವಿ.ಎನ್. ಜಗದೀಶ್ ಅವರು ಬಿಎನ್ಎಸ್ ಸೆಕ್ಷನ್ 105ರ ಭಾಗ 2ರ ಅಡಿಯಲ್ಲಿ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಆರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಅಲ್ಲದೆ, ಬಿಎನ್ಎಸ್ ಸೆಕ್ಷನ್ 240ರ ಅಡಿಯಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ಅವರು ಅಭಿಯೋಜನೆ ಪರ ವಾದ ಮಂಡಿಸಿದ್ದರು.