ಬೈಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಕೋಸ್ಟಲ್ ಟಾಕ್ ನ್ಯೂಸ್ | ಮಂಗಳೂರು

ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಗ್ಯಾರೇಜ್‌ನಲ್ಲಿ ಇರಿಸಲಾಗಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಆಗಸ್ಟ್ 26, 2026ರ ರಾತ್ರಿ ಅಂಬೆಟಡ್ಕದಲ್ಲಿರುವ ಗ್ಯಾರೇಜ್‌ನಲ್ಲಿ ಇರಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿತ್ತು. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಅವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.