ಕೋಸ್ಟಲ್ ಟಾಕ್ ನ್ಯೂಸ್ | ಕಾರವಾರ
ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ವಲಯದ ಬ್ಯಾಂಕ್ಗಳು ಸ್ಥಳೀಯ ಸಮಗ್ರ ಆರ್ಥಿಕ ಬೆಳವಣಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ದೇಶನ ನೀಡಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಸಭೆಯಲ್ಲಿ ಮಾತನಾಡಿದರು.
ಸ್ಥಳೀಯ ಯುವಕರಿಗೆ ಸ್ವ ಉದ್ಯೋಗ ಕೈಗೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಸಾಲಗಳನ್ನು ವಿತರಿಸುವಂತೆ ತಿಳಿಸಿದ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಆರ್ಥಿಕ ನೆರವು ಪಡೆಯಲು ಸಲ್ಲಿಕೆಯಾಗುವ ಅರ್ಜಿಗಳನ್ನು ಶೀಘ್ರದಲ್ಲಿ ಮಂಜೂರು ಮಾಡಬೇಕು. ಯುವಕರಿಗೆ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಠಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು, ಬರಗಾಲದ ಈ ಸಂದರ್ಭದಲ್ಲಿ ಕೃಷಿಕರ ಸಾಲದ ಮರು ಪಾವತಿ ಅವಧಿ ವಿಸ್ತರಣೆ ಕುರಿತಂತೆ ವ್ಯಾಪಕ ಜಾಗೃತಿ ಮೂಡಿಸಿ ರೈತರಿಗೆ ಈ ಯೋಜನೆಯ ನೆರವು ಒದಗಿಸಬೇಕು ಎಂದರು.
ಜಿಲ್ಲೆಯಲ್ಲಿನ ಸಾಲ ಮತ್ತು ಠೇವಣಿ ಅನುಪಾತದ ಪ್ರಮಾಣವನ್ನು ಶೇ. 60 ಕ್ಕೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಎಲ್ಲಾ ಬ್ಯಾಂಕ್ಗಳು ಕಾರ್ಯತತ್ಪರವಾಗಬೇಕು, ಸಾರ್ವಜನಿಕರು ಖಾಸಗಿ ಫೈನಾನ್ಸ್ಗಳಿಂದ ಹೆಚ್ಚಿನ ಪ್ರಮಾಣದ ಬಡ್ಡಿ ನೀಡಿ ಸಾಲ ಪಡೆದು ಶೋಷಣೆಗೆ ಒಳಗಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಬ್ಯಾಂಕ್ಗಳಲ್ಲಿ ಲಭ್ಯವಿರುವ ವಿವಿಧ ಸಾಲ ಯೋಜನೆಗಳ ಬಗ್ಗೆ ಗ್ರಾಮೀಣ ಮಟ್ಟದಲ್ಲಿಯೂ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಹಾಗೂ ಕೃಷಿ ಆಧಾರಿತ ಉದ್ದಿಮೆಗಳ ಆರಂಭಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಸೂಚಿಸಿದರು.