ಬ್ಯಾಂಕ್ ಉದ್ಯೋಗದ ಹೆಸರಿನಲ್ಲಿ ವಂಚನೆ; 15 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಕೋಸ್ಟಲ್ ಟಾಕ್ ನ್ಯೂಸ್ | ಬಂಟ್ವಾಳ
ಬ್ಯಾಂಕ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪುತ್ತೂರು ತಾಲೂಕಿನ ಬಲ್ಯ ನಿವಾಸಿ ಹಿಬ್ಬಾತುಲ್ಲ (52) ಎಂದು ಗುರುತಿಸಲಾಗಿದೆ. ಬ್ಯಾಂಕ್ನಲ್ಲಿ ಉದ್ಯೋಗ ಕೊಡಿಸುವುದಾಗಿ ಇಬ್ಬರಿಂದ ಹಣ ಪಡೆದಿದ್ದ ಆರೋಪಿ, ಉದ್ಯೋಗ ಕೊಡಿಸದೆ ಹಣವನ್ನೂ ಹಿಂದಿರುಗಿಸಿರಲಿಲ್ಲ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಲಂ 420, 465, 468, 471 ಜೊತೆಗೆ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯದ ವಾರೆಂಟ್ ಜಾರಿಯಾಗಿತ್ತು. ಅಕ್ಟೋಬರ್ 5, 2026ರಂದು ವಿಟ್ಲ ಠಾಣೆಯ ಸಿಬ್ಬಂದಿ ಶಿವಾನಂದ ಮಡ್ಡಿ, ಸಿದ್ದಪ್ಪ ಹಾಗೂ ಯಂಕಪ್ಪ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.