ಕೋಸ್ಟಲ್ ಟಾಕ್ ನ್ಯೂಸ್ | ಉಡುಪಿ 

ಉಡುಪಿ ಜಿಲ್ಲೆಯ ಉದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳ ಮೊಬೈಲ್ ಸಂಖ್ಯೆಗಳು ಮತ್ತು ಇತರ ಮಾಹಿತಿಗಳನ್ನು ಭೂಗತ ಪಾತಕಿ ಹೇಮಂತ ಪೂಜಾರಿಗೆ ನೀಡುತ್ತಿದ್ದ ಆರೋಪದ ಮೇಲೆ ಸುರೇಶ್ ಅಮೀನ್ (38) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಗಳಿಗೆ ಕರೆ ಮಾಡಿ ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಒಟ್ಟು ಎಂಟು ಪ್ರಕರಣಗಳು ದಾಖಲಾಗಿವೆ.

ಸುರೇಶ್ ಅಮೀನ್ (38)
ಸುರೇಶ್ ಅಮೀನ್ (38)

ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣಗಳು ಹಾಗೂ ಶಿರ್ವ, ಕಾಪು ಮತ್ತು ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ಬಂಧಿತ ಸುರೇಶ್ ಅಮೀನ್ ಕಾಪು ತಾಲೂಕಿನ ಎರ್ಮಾಳು ಬಡಾ ಗ್ರಾಮದ ಬಟ್ರತೋಟ ಹೌಸ್ ನಿವಾಸಿ. ಪ್ರಕರಣವೊಂದರಲ್ಲಿ ಉದ್ಯಮಿಯೊಬ್ಬರು ಬೇಡಿಕೆಯಿಟ್ಟ ಹಣ ನೀಡದೆ, ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅವರನ್ನು ಕೊಲೆ ಮಾಡಲು ಸುರೇಶ್ ಅಮೀನ್ ಮತ್ತು ಹೇಮಂತ ಪೂಜಾರಿ ಸಂಚು ರೂಪಿಸಿದ್ದರು ಎಂಬುದು ತಾಂತ್ರಿಕ ಸಾಕ್ಷ್ಯಗಳಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಹೇಮಂತ ಪೂಜಾರಿ ಸುರೇಶ್ ಅಮೀನ್‌ಗೆ ಐದು ಲಕ್ಷ ರೂ. ಕಳುಹಿಸಿದ್ದ ಎನ್ನಲಾಗಿದೆ. ಈ ಪೈಕಿ ಖರ್ಚು ಮಾಡಿದ ಹಣವನ್ನು ಹೊರತುಪಡಿಸಿ ಉಳಿದ 4.13 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣಗಳಲ್ಲಿ ಇತರರ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.