ಕೋಸ್ಟಲ್ ಟಾಕ್ ನ್ಯೂಸ್ | ಮಂಗಳೂರು 

ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಹತ್ವದ ಕಾರ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ ಹೇಳಿದರು. 

ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ ಮತ್ತು ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ರಕ್ತದಾನದಿಂದ ಮತ್ತೊಬ್ಬರ ಅಮೂಲ್ಯ ಜೀವವನ್ನು  ಉಳಿಸಲು ಸಾಧ್ಯವಿದೆ.  ಆದ್ದರಿಂದ ಪ್ರತಿಯೊಬ್ಬ ಆರೋಗ್ಯವಂತ ಅರ್ಹ ವ್ಯಕ್ತಿಯೂ ಯಾವುದೇ ತಪ್ಪು ಕಲ್ಪನೆಗಳಿಗೆ ಒಳಗಾಗದೆ, ವೈದ್ಯಕೀಯ ಮಾರ್ಗಸೂಚಿಗಳನ್ನು ಪಾಲಿಸಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ಪ್ರತಿಯೊಬ್ಬರೂ ರಕ್ತದಾನದ ಮಹತ್ವವನ್ನು ಅರಿತುಕೊಂಡು, ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆ ಇರುವವರಿಗೆ ನೆರವಾಗಬೇಕು ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ ಸ್ವಯಂಪ್ರೇರಿತ ರಕ್ತದಾನ ಮಾಡುತ್ತಾ, ಅಮೂಲ್ಯ ಜೀವಗಳನ್ನು ಉಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದ ರಕ್ತದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಬುಧವಾರ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಒಟ್ಟು 1,300  ಯೂನಿಟ್ ರಕ್ತ ಸಂಗ್ರಹಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 13 ವಿವಿಧ ಸ್ಥಳಗಳಲ್ಲಿ ಇಂದು ರಕ್ತದಾನ ಶಿಬಿರ ನಡೆಸಲಾಗಿದೆ.