ಕೋಸ್ಟಲ್ ಟಾಕ್ ನ್ಯೂಸ್ | ಕಾರವಾರ 

ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಗುಂಡಿಗಳನ್ನು ದುರಸ್ತಿಗೊಳಿಸಿ ಮತ್ತು ಬಾಕಿ ಇರುವ ಕಾಮಗಾರಿಗಳನ್ನು ಮುಕ್ತಾಯಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿಯ ಇಂಜಿನಿಯರ್‌ಗಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಜಿಲ್ಲೆಯ ಗೋಕರ್ಣ ಸೇರಿದಂತೆ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ರಸ್ತೆಗಳ ಅವ್ಯವಸ್ಥೆಯ ಬಗ್ಗೆ ದೂರುಗಳನ್ನು ನೀಡುತ್ತಿದ್ದು, ಕೂಡಲೇ ಈ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸಿಆರ್‌ಫ್ ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ ರಸ್ತೆಗಳನ್ನು ತಕ್ಷಣ ದುರಸ್ತಿ ಮಾಡಬೇಕು. ಹೊನ್ನಾವರದ ಸೂಳೆಮುರ್ಕಿ ಕ್ರಾಸ್ ನಲ್ಲಿ ಅಪಘಾತಗಳಾದಂತೆ ಸುರಕ್ಷಾತಾ ಕ್ರಮಗಳನ್ನು ಕೈಗೊಳ್ಳಬೇಕು. ಹೊನ್ನಾವರದಲ್ಲಿ ಅವೈಜ್ಞಾನಿಕವಾಗಿ ಕಳಿಸಿರುವ ಡಿಪಿಆರ್ ರಿಜೆಕ್ಟ್ ಆಗಿದ್ದು, ಇದನ್ನು ಸರಿಪಡಿಸಿ ಪುನಃ ಕಳಿಸಬೇಕು, ಅಂಕೋಲಾದಲ್ಲಿ ಡಿಪಿಆರ್ ಅನುಮೋದನೆಯಾಗಿರುವ ಕಾಮಗಾರಿಗೆ ಶೀಘ್ರದಲ್ಲಿ ಟೆಂಡರ್ ಕರೆಯಬೇಕು. ಶಿರಸಿ-ಹಾವೇರಿ ರಸ್ತೆಯನ್ನು ಸೂಕ್ತ ರೀತಿಯಲ್ಲಿ ಸರ್ವೇ ಮಾಡಿಸಿ, ಸಮಸ್ಯೆ ಇಲ್ಲದ ಕಡೆ ಕಾಮಗಾರಿ ಆರಂಭಿಸಲು ಅನುಮತಿ ನೀಡಬೇಕು. ಗ್ರಾಮ ಸಡಕ್ ಯೋಜನೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಅವಧಿಯಲ್ಲಿ ಮುಕ್ತಾಯಗೊಳಿಸುವಂತೆ ಸಂಬOಧಪಟ್ಟ ಇಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದರು.