ಕೋಸ್ಟಲ್ ಟಾಕ್ ನ್ಯೂಸ್ | ಉಡುಪಿ 

ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪಕ್ಷದ ಧ್ವನಿಯನ್ನು ಅಡಗಿಸಲು ಬಿಜೆಪಿ ಮತ್ತು ಮೆಟಾ ಸಂಸ್ಥೆ ವ್ಯವಸ್ಥಿತವಾಗಿ ಸಂಚು ನಡೆಸುತ್ತಿವೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನವೆಂಬರ್ 27ರಂದು ಉಡುಪಿ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಯಿತು. 

ಪ್ರತಿಭಟನೆಯಲ್ಲಿ ಮಾತನಾಡಿದ ಐವನ್ ಡಿಸೋಜ, ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮಾತನಾಡುವಾಗ ಮೈಕ್ ಸ್ವಿಚ್ ಆಫ್ ಮಾಡಲಾಗುತ್ತಿತ್ತು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿಯೂ ಕಾಂಗ್ರೆಸ್ ಧ್ವನಿಯನ್ನು ಅಡಗಿಸುವ ಕೆಲಸವನ್ನು ಬಿಜೆಪಿ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ಆರೋಪಿಸಿದರು. 

ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳು ಸಮಾಜದ ಎಲ್ಲ ಜನರ ಧ್ವನಿಗೆ ವೇದಿಕೆಯಾಗಬೇಕು. ಆದರೆ, ಅವು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಮುಖವಾಣಿಯಾಗಿ ಕೆಲಸ ಮಾಡುತ್ತಿವೆ ಎಂದು ದೂರಿದರು. ಕಾಂಗ್ರೆಸ್ ನಾಯಕರ ವಿಡಿಯೊಗಳನ್ನು ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಹಾಗೂ ಇತರ ಸಾಮಾಜಿಕ ಜಾಲತಾಣಗಳಲ್ಲಿ ಕತ್ತರಿಸುವ ಮೂಲಕ ಈ ಸಂಸ್ಥೆಗಳು ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿವೆ ಎಂದು ಆರೋಪಿಸಿದ ಅವರು, ಪತ್ರಿಕೋದ್ಯಮದಲ್ಲಿರುವ ಎಲ್ಲರನ್ನೂ ಬಿಜೆಪಿ ಏಜೆಂಟರು ಎಂದು ಹೇಳಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

ಸಾಮಾಜಿಕ ಜಾಲತಾಣಗಳು ಮತ್ತು ಪತ್ರಿಕೋದ್ಯಮಕ್ಕೆ ತಮ್ಮದೇ ಆದ ದೂರದೃಷ್ಟಿ ಹಾಗೂ ಸಾಮಾಜಿಕ ಜವಾಬ್ದಾರಿ ಇರಬೇಕು. ಆದರೆ, ಸಾಮಾಜಿಕ ಜಾಲತಾಣಗಳು ಸಮಾಜದಲ್ಲಿ ದಂಗೆ ಎಬ್ಬಿಸುವ ಮಟ್ಟಕ್ಕೆ ಬಂದಿವೆ ಎಂದು ಹೇಳಿದರು. ದೇಶದಲ್ಲಿ ಕಾನೂನುಬದ್ಧವಾಗಿ ಮಾತನಾಡುವ ಹಕ್ಕು ಇದೆ. ಆದರೂ ಮೆಟಾ ಸಂಸ್ಥೆ ಬಿಜೆಪಿಯ ಏಜೆಂಟಾಗಿ ಕೆಲಸ ಮಾಡುತ್ತಿರುವುದು ಖಂಡನೀಯ. ಸಮಾಜದಲ್ಲಿ ಸಾಮಾಜಿಕ ನ್ಯಾಯ ಸಿಗಬಾರದು ಮತ್ತು ಜನರ ಧ್ವನಿ ಕೇಳಬಾರದು ಎಂಬ ರೀತಿಯಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೆಲಸ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.