ಕೋಸ್ಟಲ್ ಟಾಕ್ ನ್ಯೂಸ್ | ಮಂಗಳೂರು
ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಪತ್ತೆಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಬಸ್ತಿ ಪಡ್ಪು ನಿವಾಸಿ ಜಿಮ್ಮಿ ಅಲಿಯಾಸ್ ಜಿಂಕೆ ಜಿಮ್ಮಿ ಅಲಿಯಾಸ್ ಪೈಜಲ್ ಅಲಿಯಾಸ್ ಮೊಹಮ್ಮದ್ ಪೈಜಲ್ ಎಂದು ಗುರುತಿಸಲಾಗಿದೆ.
ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಈ ಪ್ರಕರಣದ ಆರೋಪಿಯಾಗಿದ್ದ ಜಿಮ್ಮಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ 2026ರಲ್ಲಿ ನ್ಯಾಯಾಲಯವು ಪ್ರಕರಣವನ್ನು ಎಲ್ಪಿಸಿ (LPC) ಪ್ರಕರಣವೆಂದು ಪರಿಗಣಿಸಿತ್ತು. ನವೆಂಬರ್ 24ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಆರೋಪಿಯನ್ನು ಪತ್ತೆಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.