ಕೋಸ್ಟಲ್ ಟಾಕ್ ನ್ಯೂಸ್ | ಬಂಟ್ವಾಳ
6 ವರ್ಷಗಳ ಹಿಂದೆ ಸ್ಟುಡಿಯೋ ಮಾಲೀಕನ ಮೇಲೆ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕತ್ತಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು 88 ಸಾವಿರ ರೂ. ದಂಡ ವಿಧಿಸಿದೆ.
2020ರ ಅಕ್ಟೋಬರ್ 28ರಂದು ಸಂಜೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಈ ಘಟನೆ ನಡೆದಿತ್ತು. ಸ್ಟುಡಿಯೋ ಮಾಲೀಕ ದಿನೇಶ್ ಅವರು ತಮ್ಮ ಸ್ಟುಡಿಯೋದಲ್ಲಿದ್ದಾಗ, ಪೂರ್ವದ್ವೇಷದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳು ಅಲ್ಲಿಗೆ ಬಂದು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ್ದರು.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ತನಿಖೆ ನಡೆಸಿ ಆರೋಪಿಗಳಾದ ಮಹಮ್ಮದ್ ಸೈಫುದಿನ್, ಮಹಮ್ಮದ್ ಅರ್ಷಾದ್, ಅಬ್ದುಲ್ ರಹಿಮಾನ್ ಅಲಿಯಾಸ್ ಮುನ್ನಿ ಹಾಗೂ ಮಹಮ್ಮದ್ ಸವಾದ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು 2026ರ ಅಕ್ಟೋಬರ್ 28ರಂದು ನಾಲ್ವರು ಆರೋಪಿಗಳಿಗೂ ಶಿಕ್ಷೆ ಪ್ರಕಟಿಸಿದರು. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯಕ್ ವಾದ ಮಂಡಿಸಿದ್ದರು.